ಹೆಚ್‌ಎಎಲ್ ಏರ್‌ಪೋರ್ಟ್‌ನಿಂದ ಬಂದಿಳಿದ ಪ್ರಧಾನಿ ಮೋದಿ ...! 30ಕ್ಕೂ ಹೆಚ್ಚು ಮಂದಿಯಿಂದ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ ಇಂದು ಆದಿಚುಂಚನಗಿರಿಗೆ ಭೇಟಿ ನೀಡುತ್ತಿದ್ದಾರೆ. ಇದರಿಂದಾಗಿ ಬೆಂಗಳೂರು ನಗರದಲ್ಲಿಯೂ ಚಟುವಟಿಕೆಗಳು ಜೋರಾಗಿವೆ. ಪ್ರಧಾನಿ ಮೋದಿ ಅವರು ಈಗಾಗಲೇ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇದರಿಂದಾಗಿ ರಾಜಕೀಯ, ಆಡಳಿತ ಹಾಗೂ ಪೊಲೀಸ್ ಇಲಾಖೆಯ ಪ್ರಮುಖರು ಅವರನ್ನು ಸ್ವಾಗತಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿ 30ಕ್ಕೂ ಹೆಚ್ಚು ಮಂದಿ ಹೆಚ್ಎಎಲ್ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ್ದಾರೆ. ಹೆಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಮೋದಿ ಅವರನ್ನು ಸ್ವಾಗತಿಸಲು ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಭೈರೆಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಸಲೀಂ, ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಪ್ರಧಾನಿಯನ್ನು ಬರಮಾಡಿಕೊಂಡಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಆಗಮಿಸಿ, ಪ್ರಧಾನಿಗೆ ಆತ್ಮೀಯ ಸ್ವಾಗತ ಕೋರಿದರು. ಪ್ರಧಾನಿ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಒಟ್ಟು 30 ಮಂದಿ ಗಣ್ಯರು ಹಾಗೂ ಅಧಿಕಾರಿಗಳು ಅವರನ್ನು ಸ್ವಾಗತಿಸಿದ್ದಾರೆ. ರಾಜಕೀಯವಾಗಿ ಪರಸ್ಪರ ಭಿನ್ನಾಭಿಪ್ರಾಯವಿದ್ದರೂ, ರಾಜ್ಯ ಸರ್ಕಾರದ ಪ್ರತಿನಿಧಿಗಳು, ವಿರೋಧ ಪಕ್ಷದ ನಾಯಕರು ಹಾಗೂ ಬಿಜೆಪಿ ನಾಯಕರು ಒಂದೇ ವೇದಿಕೆಯಲ್ಲಿ ನಿಂತು ಪ್ರಧಾನಿಗೆ ಸ್ವಾಗತ ಕೋರಿದ್ದಾರೆ.