ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಬಿದ್ದ ಖಾಸಗಿ ಬಸ್ ! ಹಲವರಿಗೆ ಗಾಯ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ ಮೂವತ್ತಾರು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ 1.30 ರ ಸುಮಾರಿಗೆ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರ ಪ್ರಕಾರ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್, ಕಾಗೇಹಳ್ಳದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು, ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಈ ಭಯಾನಕ ಅಪಘಾತದಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ ಒಟ್ಟು 36 ಜನ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಲ್ಲಿ 25 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಭದ್ರಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತರೆ ಸುದ್ದಿಗಳು